ಅಮೃತ್ ಪೌಲ್ ಬಂಧಿಸಿದ ಸಿಐಡಿ ತಂಡಕ್ಕೆ ಎಚ್‌ಡಿಕೆ ಅಭಿನಂದನೆ

ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ದರ್ಜೆ ಉನ್ನತ ಅಧಿಕಾರಿಯನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ. ಸಿಐಡಿ ತನಿಖಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಹೇಳಿದ್ದಾರೆ.
ಸಿಐಡಿ ನೇತೃತ್ವ ವಹಿಸಿರುವ ದಕ್ಷ ಅಧಿಕಾರಿ ಪಿ.ಎಸ್.ಸಂಧು ಅವರು ಎಷ್ಟೇ ರಾಜಕೀಯ ಮತ್ತು ಅಧಿಕಾರಿಶಾಹಿ ಮಟ್ಟದಲ್ಲಿ ಒತ್ತಡ ಎದುರಾದರೂ ಮಣಿಯದೆ ತನಿಖಾ ತಂಡವನ್ನು ಮುನ್ನಡೆಸಿದ್ದಾರೆ.
ಅವರಿಗೆ ಅಭಿನಂದನೆಗಳು’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.‘ಇನ್ನು ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ.
ಕೆಳ ಮತ್ತು ಹಿರಿಯ ಹಂತದ ಅಧಿಕಾರಿಗಳ ಜೊತೆಗೆ ಸರ್ಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್‍ಪಿನ್‍ಗಳನ್ನು ಸಿಐಡಿ ಅಧಿಕಾರಿಗಳು ಹಿಡಿಯಬೇಕಿದೆ.
ಯಾವುದೇ ಕಾರಣಕ್ಕೂ ಈ ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು’ ಎಂದು ಎಚ್‍ಡಿಕೆ ಹೇಳಿದ್ದಾರೆ.ನಾನು ಮೊದಲೇ ಹೇಳಿದ್ದೆ.
ಪಿಎಸ್ಐ ಹಗರಣದಲ್ಲಿ ಒಬ್ಬರು ಮಹಾನ್ ಕಿಂಗ್‍ಪಿನ್ ಇದ್ದಾರೆ.
ಅವರ ಹೆಸರು ಹೇಳಿದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಹೀಗೆ ಹೇಳಿದಾಗ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡ್ತಾರೆ ಎಂದಿದ್ದರು.
ದಾಖಲೆ ಕೊಡಿ ಎಂದಿದ್ದರು. ಈಗ ಅವರು ಏನು ಹೇಳುತ್ತಾರೆ?’ ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.