ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿಂದ ಊರುಗಳಿಗೆ ತೆರಳುವವರಿಗೆ ಗುಡ್ ನ್ಯೂಸ್

ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‍ಆರ್‍ಟಿಸಿ)ವು ಆ.29 ಮತ್ತು 30ರಂದು ವಿವಿಧ ಸ್ಥಳಗಳಿಗೆ 500 ವಿಶೇಷ ಬಸ್‍ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿರುವುದಲ್ಲದೆ ಪ್ರಯಾಣಿಕರಿಗೆ ವಿವಿಧ ಆಫರ್‍ಗಳನ್ನು ನೀಡಿದೆ.
ಈ ಹೆಚ್ಚುವರಿ ಬಸ್‍ಗಳು ಈ ಎರಡು ದಿನ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚರಿಸಲಿವೆ. ಇದರ ಜತೆಗೆ ಕರ್ನಾಟಕದಿಂದ ಹೊರ ರಾಜ್ಯಗಳಿಗೆ ನಿಗಮದಿಂದ ಹೆಚ್ಚುವರಿ ಬಸ್ ಸಂಚರಿಲಿವೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ಮಂಗಳೂರು, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಿವೆ.
ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ನಗರದಲ್ಲಿರುವ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ಸಂಚರಿಸಲಿವೆ.ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ರಾಜ್ಯದ ಹಾಗೂ ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಆಗಸ್ಟ್ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ನೆರೆ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಸಾಗಲಿವೆ.ಇನ್ನು ಪ್ರಯಾಣಿಕರಿಗೆ ಟಿಕೆಟ್ ಪಡೆಯಲು ತೊಂದರೆ ಆಗದಂತೆ ಎಚ್ಚರ ವಹಿಸಿರುವ ನಿಗಮವು ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆನ್‍ಲೈನ್ ಮೂಲಕ ಆಸನಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಿದೆ.
ಮುಂಗಡ ಆನ್‍ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶವಿದ್ದು, 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ಹಾಗೂ ಹೋಗಿ-ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್ ಮೇಲೆ ನಮೂದಿಸಿರುವ ಬಸ್ ನಿಲ್ದಾಣ ಇಲ್ಲವೇ ಪಿಕ್ ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.