
ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ಖಚಿತಪಡಿಸಿವೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳು ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಮೇ18ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೌಲ್ಯಮಾಪನಕ್ಕೆ ಚಾಲನೆ ನೀಡಲಾಯಿತು. ನೋಂದಣಿ ಮಾಡಿದ ಪ್ರಾಧ್ಯಾಪಕರು ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದ ಕಾರಣ ಪರೀಕ್ಷೆ ಫಲಿತಾಂಶ ಪ್ರಕಟದಲ್ಲಿ ವಿಳಂಬವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಆರಂಭದಲ್ಲಿ ಜೂ.15ಕ್ಕೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆಯಿತ್ತು. ಆದರೆ ಈಗಿನ ಮೌಲ್ಯಮಾಪನ ವೇಗ ನೋಡಿದರೆ ಜೂ. 20ರಿಂದ 25ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬರಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಹೇಳಿವೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏ.22ರಿಂದ ಆರಂಭವಾಗಿ ಮೇ 18 ಕ್ಕೆ ಮುಗಿದಿತ್ತು. ರಾಜ್ಯಾದ್ಯಂತ 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6.84 ಲಕ್ಷ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3.46 ಲಕ್ಷ ಬಾಲಕರು, 3.37 ಲಕ್ಷ ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6 ಲಕ್ಷ ವಿದ್ಯಾರ್ಥಿಗಳಷ್ಟೇ ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದು, 61 ಸಾವಿರ ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.
ಈ ಬಾರಿ ಪಿಯುಸಿ ಫಲಿತಾಂಶ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸಲು ಶಿಕ್ಷಣ ಸಚಿವರು ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.