
ರಾಜ್ಯದ ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅಧಿಕಾರ ಗೌಪ್ಯತೆ ಬೋಧಿಸಿದರು. ದೇವರ ಹೆಸರಿನಲ್ಲಿ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಪಿ.ವಿಶ್ವನಾಥ್ ಶೆಟ್ಟಿ ಅವರು ಸೇವೆಯಿಂದ ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಹಾಲಿ ಉಪಲೋಕಾಯುಕ್ತರಾಗಿರುವ ಬಿ.ಎಸ್.ಪಾಟೀಲ್ ಅವರನ್ನು ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಸರ್ಕಾರ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿತ್ತು.
ಸರ್ಕಾರದ ಶಿಫಾರಸ್ಸನ್ನು ನಿನ್ನೆ ರಾಜ್ಯಪಾಲ ತಾವರ್‍ಚಂದ್ ಗೆಲ್ಹೋಟ್ ಅವರು ಅನುಮೋದಿಸಿ ಆದೇಶ ಹೊರಡಿಸಿದ್ದರು. 1956ರಲ್ಲಿ ಜನಿಸಿದ ಬಿ.ಎಸ್.ಪಾಟೀಲ್ ಅವರು 1980ರಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದರು. 2004ರಲ್ಲಿ ಹೈಕೋರ್ಟ್‍ನ ಖಾಯಂ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಹಲವು ಪ್ರಕರಣಗಳಲ್ಲಿ ಕೆಲವು ಮಹತ್ವದ ತೀರ್ಪುಗಳನ್ನು ನೀಡಿ ಅವರು ಗಮನ ಸೆಳೆದಿದ್ದರು.
ಲೋಕಾಯುಕ್ತರನ್ನಾಗಿ ನೇಮಕ ಮಾಡುವ ಮುನ್ನ ಶಿಷ್ಟಾಚಾರದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಜೊತೆ ಚರ್ಚಿಸಿದ ನಂತರವೇ ಬಿ.ಎಸ್.ಪಾಟೀಲ್ ಹೆಸರನ್ನು ಲೋಕಾಯುಕ್ತ ನ್ಯಾಯಮೂರ್ತಿ ಹುದ್ದೆಗೆ ಸರ್ಕಾರ ಶಿಫಾರಸ್ಸು ಮಾಡಿತ್ತು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಅರಗ ಜ್ಞಾನೇಂದ್ರ, ವಿ.ಸೋಮಣ್ಣ, ಹಾಲಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.ಈ ಹಿಂದೆ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಪಿ.ವಿಶ್ವನಾಥ್ ಶೆಟ್ಟಿ ಅವರು ಕಳೆದ ಜನವರಿ 27ರಂದು ಸೇವೆಯಿಂದ ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.