ಪೌರಕಾರ್ಮಿಕರ ಸೇವೆ ಖಾಯಂಗೆ ಶೀಘ್ರ ಆದೇಶ

ರಾಜ್ಯದ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ೧೧,೧೩೩ ಪೌರ ಕಾರ್ಮಿಕರನ್ನು ಖಾಯಂ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಕೆಲವೇ ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ವಿಧಾನಪರಿಷತ್‌ನಲ್ಲಿಂದು ತಿಳಿಸಿದರು.
ಪೌರ ಕಾರ್ಮಿಕರ ಬಹುದಿನಗಳ ಬೇಡಿಕೆಯನ್ನು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಗಣಿಸಿ ಅವರ ಹಿತ ಕಾಪಾಡುವ ದೃಷ್ಟಿಯಿಂದ ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಖಾಯಾಮಾತಿ ನಿರ್ಧಾರ ಕೈಗೊಳ್ಳಲಾಗಿದೆ.
ಅವರಿಗೆ ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದರು.
ಪ್ರಶ್ನೋತ್ತರ ಅವಧಿಯಲ್ಲಿ ಆಯನೂರು ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಬಿಎಂಪಿ ವ್ಯಾಪ್ಯಿ ೩೬೭೩, ಉಳಿದ ಮಹಾನಗರ ಪಾಲಿಕೆಯಲ್ಲಿ ೧೯೨೭ ಹಾಗೂ ಇನ್ನುಳಿದ ೫ ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಖಾಯಂ ಮಾಡಲಾಗಿದೆ ಎಂದರು.
ಖಾಯಂಗೊಂಡಿರುವ ಪೌರ ಕಾರ್ಮಿಕರಿಗೆ ೧೭ ಸಾವಿರದಿಂದ ೨೮,೯೦೦ ರೂ.
ಗಳವರೆಗೆ ವೇತನ ಶ್ರೇಣಿಯಲ್ಲಿ ವೇತನ ನೀಡಲು ಕೂಡಾ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ರಾಜ್ಯದ ಒಟ್ಟು ೧೦ ಮಹಾನಗರ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಖಾಯಮಾತಿಯಿಂದ ಈ ಸಮುದಾಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ಇನ್ನುಳಿದವರ ಖಾಯಾಮಾತಿಗೂ ಕ್ರಮ
ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ಕ್ಲೀನರ್‌ಗಳು, ವಾಟರ್‌ಮನ್, ಒಳಚರಂಡಿ ಕೆಲಸ ಮಾಡುವ ಕಾರ್ಮಿಕರನ್ನು ಕೂಡಾ ಹಂತ ಹಂತವಾಗಿ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಿಬ್ಬಂದಿಯನ್ನು ಖಾಯಂ ಮಾಡುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ವಿಶೇಷ ಕಾಳಜಿ ವಹಿಸಲಾಗುವುದು ಎಂದು ಹೇಳಿದರು.
ಮಹಾನಗರಪಾಲಿಕೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ೧೧,೧೩೩ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಖಾಯಂ ಮಾಡಲಾಗಿದೆ ಎಂದು ಅವರು ತಿಳಿಸಿದರು.