
ಬಂಗಾಳಕೊಲ್ಲಿ ಮತ್ತು ಅರಬ್ಬೀಸಮುದ್ರದಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತದಿಂದ ಕಳೆದ ಐದು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನು ಒಂದು ವಾರಕ್ಕೂ ಹೆಚ್ಚು ಕಾಲ ಮಳೆ ಮುಂದುವರೆಯಲಿದೆ.
ನಾಳೆಯಿಂದ ಆ.31 ರವರೆಗೂ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆ.21ರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ನಿನ್ನೆ ಕೂಡ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ.
ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ನಾಳೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಆ.31 ಮತ್ತು ಸೆ.1ರಂದು 50ರಿಂದ 60 ಮಿ.ಮೀನಷ್ಟು ಮಧ್ಯಮ ಪ್ರಮಾಣದ ಮಳೆ ಬರಲಿದೆ.
ಸೆಪ್ಟೆಂಬರ್ 3ರವರೆಗೂ ಮಳೆ ರಾಜ್ಯದಲ್ಲಿ ಮುಂದುವರೆಯಲಿದೆ. ಕರಾವಳಿ ಭಾಗದಲ್ಲಿ ನಾಳೆಯಿಂದ ಮಳೆ ಪ್ರಮಾಣ ಇಳಿಮುಖವಾಗಲಿದ್ದು, ರಾಜ್ಯದ ಒಳನಾಡಿನಲ್ಲಿ ಹೆಚ್ಚಾಗಲಿದೆ ಎಂದು ಹೇಳಿದರು.
ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಸಾಧಾರಣ ಮಳೆ ಮುಂದುವರೆಯಲಿದೆ. ಆದರೆ ಕೆಲವೆಡೆ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.