
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 17 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಬಾಲಕಿ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾಲಕಿಗೆ ಪರಿಚಯವಿರುವ ಯುವಕರೇ ಲೈಂಗಿಕ ಕಿರುಕುಳ ನೀಡಿದ್ದು, ಬೇರೆ ಬೇರೆ ಸಮಯದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ಪೋಷಕರು ದೂರಿದ್ದಾರೆ.
ಇನ್ನೂ ಆರೋಪಿತರು ಬಾಲಕಿಯ ಕೆಲ ಖಾಸಗಿ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳಾದ ದೇವರಾಜ, ಶೇಖರ್, ಬಸವ, ಭೈರ ಎಂಬ ನಾಲ್ವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.