ಬಿಜೆಪಿ ಸರಕಾರವನ್ನು ಕಿತ್ತೊಗೆದು ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು: ರಾಜ್ಯಪಾಲರಿಗೆ ಎಸ್ ಡಿಪಿಐ ಮನವಿ.

ಬೆಂಗಳೂರು: ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಬಿಜೆಪಿ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸುವಂತೆ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಪಾಲರಿಗೆ ಮನವಿ ಮಾಡಿದೆ. ನಿನ್ನೆ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲರನ್ನು ಪಕ್ಷದ ನಿಯೋಗವು ಭೇಟಿ ಮಾಡಿ, ಬಿಜೆಪಿ ಸರಕಾರದ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅಭಿವೃದ್ಧಿ ಯೋಜನೆಗಳ ಅನುದಾನವನ್ನು ಕಬಳಿಸುತ್ತಿದ್ದಾರೆ. ಅನಗತ್ಯವಾಗಿ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಿದ್ದಾರೆ.
ಇದರಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿ, ಜನರ ನೆಮ್ಮದಿಗೆ ಭಂಗವಾಗಿದೆ.ಕೋಮುಗಲಭೆಗಳನ್ನು ನಿಯಂತ್ರಿಸಲು ಆಗದೆ ಜನರನ್ನು ಬಲಿ ಕೊಡಲಾಗುತ್ತಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಜನಪ್ರತಿನಿಧಿಗಳು ಶೇ.40 ಕಮಿಷನ್ ವ್ಯವಹಾರದಲ್ಲಿ ತೊಡಗಿದ್ದರೆ, ಬಿಜೆಪಿ ಕಾರ್ಯಕರ್ತರು ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಶಾಮೀಲಾಗಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮುಖ್ಯಮಂತ್ರಿ ಸ್ಥಾನಕ್ಕೆ 2,500 ಕೋಟಿ ರೂ. ಲಂಚ ಕೇಳಲಾಗುತ್ತಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಹೀಗೆ ವ್ಯಾಪಕ ಭ್ರಷ್ಟಾಚಾರದಲ್ಲೇ ಮುಳುಗಿರುವ ಬಿಜೆಪಿ ಸರಕಾರವನ್ನು ಕಿತ್ತೊಗೆದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಅವರು ಹೇಳಿದರು.