ಭ್ರಷ್ಟಾಚಾರ ಪ್ರಕರಣ ಬಿಎಸ್‌ವೈ ವಿರುದ್ಧದ ತನಿಖೆಗೆ ಸುಪ್ರೀಂ ತಡೆ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸರ್ವೋಚ್ಛ ನ್ಯಾಯಾಲಯ ಇಂದು ತಡೆಯಾಜ್ಞೆ ನೀಡಿದೆ.
ಇದರಿಂದಾಗಿ ಬಿ.ಎಸ್ ಯಡಿಯೂರಪ್ಪ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.ಜನಪ್ರತಿನಿಧಿಗಳ ನ್ಯಾಯಾಲಯ ಬಿಎಸ್‌ವೈ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿತ್ತು. ಈ ಸೂಚನೆಯಂತೆ ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಮೊರೆ ಹೋಗಿದ್ದರು.ಇಂದು ಸುಪ್ರೀಂಕೋರ್ಟ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆದು ಸಾಮಾಜಿಕ ಕಾರ್ಯಕರ್ತ ಪಿ.ಜೆ ಅಬ್ರಹಾಂ ಅವರಿಗೆ ನೋಟಿಸ್ ಜಾರಿ ಮಾಡಿತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಅನುಷ್ಠಾನದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮತ್ತು ಕುಟುಂಬ ಸದಸ್ಯರು ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿತ್ತು.
ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್ಸ್‌ಟ್ರಕ್ಷನ್ ಕಂಪನಿ ಮತ್ತು ಕೆಲವು ಶೆಲ್ ಕಂಪನಿಗಳಿಂದ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಕುಟುಂಬ ಸದಸ್ಯರು ಕೋಟ್ಯಂತರ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸಿ.ಜೆ ಅಬ್ರಹಾಂ ಖಾಸಗಿ ದೂರು ದಾಖಲಿಸಿ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದರು.
ಈ ಹಿಂದೆ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರಿಂದ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ೨೦೨೧ರ ಜು. ೮ ರಂದು ದೂರನ್ನು ವಜಾಗೊಳಿಸಿತ್ತು.