ಮಧ್ಯಪ್ರದೇಶದಲ್ಲಿ ಪ್ರತ್ಯೇಕ ಅಪಘಾತ: ಐವರು ಮಹಿಳೆಯರು ಸೇರಿ12 ಸಾವು

ಕಳೆದ 24 ಗಂಟೆಯಲ್ಲಿ ಮಧ್ಯಪ್ರದೇಶದ ಬೇತುಲ್, ಖಾಂಡ್ವಾ, ಸಿಂಗ್ರೌಲಿ ನಡೆದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.
ಕನಿಷ್ಠ 35 ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ 18 ಮಂದಿ ಜೀವನ್ಮರಣದೊಂದಿಗೆ ಹೋರಾಡುತ್ತಿದ್ದಾರೆ.ಬೆತುಲ್ ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿಮೀ ದೂರದಲ್ಲಿರುವ ಕೆಸಿಯಾ-ಕನ್ಹೆಗಾಂವ್ ರಸ್ತೆಯಲ್ಲಿ ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿ 12.30 ರ ಸುಮಾರಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ, 23 ಮಂದಿ ಗಾಯಗೊಂಡಿದ್ದಾರೆ.
ಇಮ್ಲಿಧಾನದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಬೋಂಡ್ರಿ ಗ್ರಾಮಕ್ಕೆ ಹಿಂತಿರುಗುತ್ತಿದ್ದವರ ವಾಹನ ಅಪಘಾತಕ್ಕೀಡಾಗಿದೆ.
ಗಂಭೀರವಾಗಿ ಗಾಯಗೊಂಡ 12 ಜನರನ್ನು ಚಿಚೋಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಠಾಣೆ ಅಧಿಕಾರಿ ತರನ್ನುಮ್ ಖಾನ್ ಹೇಳಿದ್ದಾರೆ.
ಖಾಂಡ್ವಾದಲ್ಲಿ ಶುಕ್ರವಾರ ರಾತ್ರಿ ರೋಶನಿ ಪೊಲೀಸ್ ಠಾಣೆ ವ್ಯಾಪ್ತಿಯ ಖಿರ್ಕಿಯಾ-ಖಲ್ವಾ ರಸ್ತೆಯ ಧನೋರಾ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ರವೀಂದ್ರ ವಾಸ್ಕಲೆ ತಿಳಿಸಿದ್ದಾರೆ.
ಹರ್ಸೂದ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮೇಧಾಪಾಣಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದರು. ಆರು ಜನರ ಸ್ಥಿತಿ ಗಂಭೀರವಾಗಿದೆ.
ಅವರು ಖಾಂಡ್ವಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಾಸ್ಕಾಲೆ ಹೇಳಿದರು.ಸಿಂಗ್ರೌಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಅಮ್ರಾಹ್ವಾ ಗ್ರಾಮದ ಬಳಿ ಟ್ರಕ್‍ಗೆ ಮೋಟಾರ್‍ಸೈಕಲ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ.
ಹಿಂಬದಿ ಕುಳಿತಿದ್ದ ಮಹಿಳೆ ಗಾಯಗೊಂಡಿದ್ದಾರೆ. ಲಾರಿಯನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಮಾಡಾ ಪೊಲೀಸ್ ಠಾಣೆಯ ಅಧಿಕಾರಿ ನಾಗೇಂದ್ರ ಸಿಂಗ್ ಹೇಳಿದ್ದಾರೆ.