
ಪರವಾನಗಿ ಪಡೆದ ಅಗ್ರಿಗೇಟರ್ ಸಂಸ್ಥೆಗಳು ಒದಗಿಸುವ ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆಗೆ ಶೇಕಡ 5 ಸೇವಾ ಶುಲ್ಕ ಹಾಗೂ ಜಿಎಸ್‌ಟಿ ಸೇರಿಸಿ ದರ ನಿಗದಿಪಡಿಸುವಂತೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಸೂಚಿಸಿ ಸಾರಿಗೆ ಇಲಾಖೆಯು 2022ರ ನ.25ರಂದು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಇದರಿಂದಾಗಿ ಹಾಲಿ ದರಕ್ಕಿಂತ ಶೇ.5 ಹೆಚ್ಚು ದರವನ್ನು ಸಂಸ್ಥೆಗಳು ಪ್ರಯಾಣಿಕರಿಂದ ವಸೂಲಿ ಮಾಡಬಹುದಾಗಿದೆ.
ಸಾರಿಗೆ ಇಲಾಖೆ ಹೊರಡಿಸಿದ್ದ ಈ ಅಧಿಸೂಚನೆ ರದ್ದು ಕೋರಿ ಎಎನ್‌ಐ ಟೆಕ್ನಾಲಜೀಸ್ ಪ್ರೈ.ಲಿ. (ಓಲಾ), ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈ.ಲಿ. ಹಾಗೂ ರೊಪ್ಪೆನ್ ಟ್ರಾನ್ಸ್‌ಪೊರ್ಟೇಷನ್ ಸವೀರ್‍ಸಸ್ (ರಾಪಿಡೋ) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆ ಸೂಚಿಸಿ ಅ.11ರಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು.
ಅದನ್ನು ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದವು. ಅವುಗಳ ವಿಚಾರಣೆ ವೇಳೆ ಹೈಕೋರ್ಟ್ ಸಲಹೆಯಂತೆ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಸರ್ಕಾರ ತಿಳಿಸಿತ್ತು.
ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸುವಂತೆ ನಿರ್ದೇಶಿಸಿ ಸಾರಿಗೆ ಇಲಾಖೆ ನ.25ರಂದು ಅಧಿಸೂಚನೆ ಹೊರಡಿಸಿತ್ತು.
ಈ ಅಧಿಸೂಚನೆಯನ್ನು ಪ್ರಶ್ನಿಸಿ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಅಗ್ರಿಗೇಟರ್ ಸಂಸ್ಥೆಗಳು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಪ್ರಯಾಣಿಕರಿಂದ ಪಡೆಯುವ ಶುಲ್ಕದ ಶೇ.20ರವರೆಗೆ ಸೇವಾ ಶುಲ್ಕ ಪಡೆಯಲು ಅವಕಾಶವಿದೆ.