ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹದಳ ಲೋಕಾಯುಕ್ತ ವ್ಯಾಪ್ತಿಗೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳ ಲೋಕಾಯುಕ್ತ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಈ ಮೂಲಕ ACB ರಚಿಸಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಎಸಿಬಿಯಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ, ಎಸಿಬಿಯ ಎಲ್ಲಾ ಪೊಲೀಸ್ ಠಾಣೆಗಳನ್ನು ರದ್ದುಪಡಿಸುವಂತೆ ಹೈಕೋರ್ಟ್ ಆದೇಶಿಸಿದೆ.ಅಷ್ಟೇ ಅಲ್ಲದೇ ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಮರುಸ್ಥಾಪಿಸುವಂತೆ ಹೈಕೋರ್ಟ್ ಆದೇಶದಲ್ಲಿ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಕೆ.ಎಸ್ ಹೇಮಲೇಖಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.ಎಸಿಬಿಯಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಲೋಕಾಯಕ್ತಕ್ಕೆ ವರ್ಗಾಯಿಸುವಂತೆ ಆದೇಶ ಹೊರಡಿಸಿದೆ.ಸಿದ್ದರಾಯಮ್ಯ ನೇತೃತ್ವದ ಸರ್ಕಾರ 2016ರ ಮಾರ್ಚ್ 14ರಂದು ಎಸಿಬಿ ರಚಿಸಿತ್ತು. 2016ರ ಮಾರ್ಚ್ 19ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಅಪರಾಧ ಪ್ರಕರಣ ದಾಖಲಾಗಿತ್ತು.
ತನಿಖೆಗೆ ಸಂಬಂಧಿಸಿದಂತೆ ಇದ್ದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿರುವ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು.ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿರುವ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಲೋಕಾಯುಕ್ತಕ್ಕೆ ಆನೆ ಬಲ ಬಂದತಾಗಿದೆ.