
ಮಲೆನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕೂಲಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕನನ್ನು ಒಂಟಿ ಸಲಗ ತುಳಿದು ಸಾಯಿಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಕಬ್ಬಿನ ಗದ್ದೆ ಗ್ರಾಮದಲ್ಲಿ ನಡೆದಿದೆ. ರವಿಕುಮಾರ್(48) ಮೃತಪಟ್ಟ ಕೂಲಿ ಕಾರ್ಮಿಕ.ಬಾಳ್ಳುಪೇಟೆಯ ವಿಶ್ವನಾಥ್ ಅವರ ಕಬ್ಬಿನ ಗದ್ದೆಯಲ್ಲಿರುವ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಒಂಟಿ ಸಲಗ ರವಿಕುಮಾರ್ ಮೇಲೆ ದಾಳಿ ಮಾಡಿ ತುಳಿದು ಸಾಯಿಸಿದೆ.
ಸಕಲೇಶಪುರ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸ್ಥಳಾಂತರಿಸಬೇಕೆಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರ ಪ್ರತಿಭಟನೆ ಮಾಡಿದ್ದರು.
ಈ ವೇಳೆ ಆನೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ.ಮೊನ್ನೆ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಹಲವು ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟಾಗ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಕಂದಾಯ ಸಚಿವರು ಕೂಡ ಭರವಸೆ ನೀಡಿದ್ದರು.
ಆದರೆ ಭರವಸೆ ನೀಡಿದ ವಾರದಲ್ಲೇ ಮತ್ತೊಂದು ಜೀವ ಕಾಡಾನೆ ದಾಳಿಗೆ ಬಲಿಯಾಗಿದೆ. ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ಬಸವರಾಜ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಹೊರತು ಆನೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಗಳು, ಮಲೆನಾಡು ಭಾಗದಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ದೊರಕಿಸಿಕೊಡಬೇಕೆಂಬುದು ಈ ಭಾಗದ ಜನರ ಆಗ್ರಹವಾಗಿದೆ.