ಹಾಸ್ಟೆಲ್ ಸಮಸ್ಯೆ ನಿವಾರಣೆಗೆ ಕ್ರಮ : ಪೂಜಾರಿ ಭರವಸೆ

ಪದವಿಪೂರ್ವ, ಪದವಿ ಶಿಕ್ಷಣ, ವೃತ್ತಿಪರ ಶಿಕ್ಷಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಉಂಟಾಗಿರುವ ಹಾಸ್ಟೆಲ್ ಸಮಸ್ಯೆಯನ್ನು ಬಗೆಹರಿಸಲಾಗು ವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾಶ್ರೀನಿವಾಸ ಪೂಜಾರಿ ವಿಧಾನಸಭೆಯಲ್ಲಿ ತಿಳಿಸಿದರು.
ರಾಜ್ಯದ ಹಲವೆಡೆ ಪದವಿಪೂರ್ವ, ಪದವಿ ಶಿಕ್ಷಣ, ವೃತ್ತಿಪರ ಶಿಕ್ಷಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಒದಗಿಸಲು ಸರ್ಕಾರ ಹಂತ ಹಂತವಾಗಿ ಕ್ರಮಕೈಗೊಳ್ಳಲಿದೆ ಎಂದು ಅನಿಲ್.ಎಸ್ ಧನಕೆ ಅವರ ಪ್ರಶ್ನೆಗೆ ಉತ್ತರಿಸಿದರು.
ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಒಂದು ಮೆಟ್ರಿಕ್‌ಪೂರ್ವ ಹಾಗೂ ಮೆಟ್ರಿಕ್ ನಂತರದ ೧೫ ವಿದ್ಯಾರ್ಥಿ ನಿಲಯಗಳಿದ್ದು, ಅವುಗಳಲ್ಲಿನ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ದೃಷ್ಠಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದವಿದ್ಯಾರ್ಥಿ ನಿಲಯಗಳಲ್ಲಿನ ಮಂಜೂರಾತಿ ಸಂಖ್ಯೆಯನ್ನು ಶೇ. ೨೫ರಷ್ಟಕ್ಕೆ ಹೆಚ್ಚಳ ಮಾಡಲಾಗಿದೆ ಎಂದರು. ಬೆಳಗಾವಿ ೧೫ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚುವರಿಯಾಗಿ ೪೬೩ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗಿದೆ ಎಂದರು.
ದೀನ್‌ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಯೋಜನೆಯಡಿ ಮೊದಲ ಹಂತದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತಲಾ ೧೦೦ ಸಂಖ್ಯಾ ಬಲದ ತಲಾ ಒಂದು ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಿ ಪ್ರವೇಶಾತಿಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.