ಹೊಸ ವರ್ಷಕ್ಕೆ ಮಾರ್ಗಸೂಚಿ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹಾಗೂ ಹೊಸ ವರ್ಷ ಆಚರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮಾಸ್ಕ್ ಧರಿಸುವುದನ್ನು ಹಾಗೂ ಕೋವಿಡ್ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.
ಇಂದು ಸಂಜೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುತ್ತದೆ.ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದ ರೀತಿಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿ ಮಾಡುವ ತೀರ್ಮಾನ ಮಾಡಲಾಗಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಗಳ ಆಧಾರದ ಮೇಲೆ ಕೋವಿಡ್ ನಿಯಮಗಳನ್ನು ರೂಪಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಹೊಸ ವರ್ಷಾಚರಣೆಗೂ ಪ್ರತ್ಯೇಕ ಮಾರ್ಗಸೂಚಿಗಳನ್ನು ಜಾರಿ ಮಾಡುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿದ್ದು, ಅಂತಿಮವಾಗಿ ಕೋವಿಡ್ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ಈ ಮಾರ್ಗಸೂಚಿಗಳನ್ನು ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಕೊರೊನಾ ನಿಯಂತ್ರಣಕ್ಕೆ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮಾಸ್ಕ್ ಧರಿಸುವಿಕೆ ಹಾಗೂ ಬೂಸ್ಟರ್ ಡೋಸ್‌ನ್ನು ಕಡ್ಡಾಯಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಮಾಸ್ಕ್ ಕಡ್ಡಾಯ ಜಾರಿಯಾಗುವ ಸಾಧ್ಯತೆ ಇದೆ.
ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೊರೊನಾ ಹೆಚ್ಚಾಗದಂತೆ ನೋಡಿಕೊಳ್ಳಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಕೆಲ ಶಿಫಾರಸ್ಸುಗಳನ್ನು ಮಾಡಿದ್ದು, ಈ ಶಿಫಾರಸ್ಸುಗಳ ಬಗ್ಗೆ ಇಂದು ಸಂಜೆ ಬೆಳಗಾವಿಯ ಸುವರ್ಣಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಈ ತೀರ್ಮಾನಗಳ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿಗಳನ್ನು ಜಾರಿ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗಾರರಿಗೆ ತಿಳಿಸಿದರು.ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕೋವಿಡ್ ಹೆಚ್ಚಾಗುವುದನ್ನು ತಡೆಯಲು ಕೆಲವು ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವಂತೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಸರ್ಕಾರಕ್ಕೆ ಕೆಲ ಶಿಫಾರಸ್ಸುಗಳನ್ನು ಮಾಡಲಾಗಿದೆ.
ಸಲಹಾ ಸಮಿತಿ ಶಿಫಾರಸುಹೊಸ ವರ್ಷಾಚರಣೆಯನ್ನು ಒಳಾಂಗಣದ ಬದಲು ಹೊರಾಂಗಣದಲ್ಲಿ ನಡೆಸಬೇಕು.ತಡರಾತ್ರಿ ಅಥವಾ ಮುಂಜಾನೆ ಹೊಸ ವರ್ಷಾಚರಣೆ ಕಾರ್ಯಕ್ರಮಗಳ ಆಯೋಜನೆ ಬೇಡ.ಸಂಭ್ರಮಾಚರಣೆಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಮಾಸ್ಕ್ ಕಡ್ಡಾಯ ಇಲ್ಲದವರಿಗೆ ಪ್ರವೇಶ ನಿಷಿದ್ಧ.ನೂತನ ವರ್ಷದ ಔತಣಕೂಟಗಳಲ್ಲಿ ಭಾಗವಹಿಸುವವರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಬೇಕು.
ದೇಹದ ಉಷ್ಣಾಂಶ ಹೆಚ್ಚಿರುವವರಿಗೆ ಪ್ರವೇಶ ನಿಷಿದ್ಧ. ೬೦ ವರ್ಷ ಮೇಲ್ಪಟ್ಟವರು ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ.*ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಯೊಬ್ಬರೂ ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಕಡ್ಡಾಯ. ಹೊಸ ವರ್ಷಾಚರಣೆ ಸಮಾರಂಭದಲ್ಲಿ ಅನಾರೋಗ್ಯ ಇರುವವರು ಭಾಗವಹಿಸುವುದು ನಿಷೇಧ.