Uncategorized

BIGG NEWS : ಹಂಪಿಯಲ್ಲಿ ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ನಟ ಅಜಯರಾವ್, ಪದ್ಮಶ್ರೀ ಮಂಜಮ್ಮ ಜೋಗತಿ ಸೇರಿ ಸಚಿವರು ಭಾಗಿ

ಹೊಸಪೇಟೆ : ವಿಶ್ವಪಾರಂಪರಿಕ ತಾಣವಾಗಿರುವ ಐತಿಹಾಸಿಕ ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಮುಂಭಾಗದ ವಿಶಾಲ ಆವರಣ ಅಥವಾ ಕಮಲ ಮಹಲ್‍ನ ವಿಶಾಲ ಮೈದಾನದಲ್ಲಿ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

5 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕನ್ನಡದ ಖ್ಯಾತ ನಟ ಅಜಯರಾವ್, ಪದ್ಮಶ್ರೀ ಮಂಜಮ್ಮ ಜೋಗತಿ, ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್, ಮುಜರಾಯಿ,ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿವಿಧ ಸಮಿತಿಗಳನ್ನು ರಚಿಸಿದ್ದು ರಚಿಸಲಾಗಿರುವ ವಿವಿಧ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸೂಚನೆ ನೀಡಿದರು.

ಜೂ.21ರಂದು ಬೆಳಗ್ಗೆ 6ಕ್ಕೆ ಯೋಗ ಕಾರ್ಯಕ್ರಮಗಳು ಆರಂಭವಾಗಲಿದ್ದು,6:40ರವರೆಗೆ ಯೋಗ ಸಂಬಂಧಿತ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್, ಮುಜರಾಯಿ,ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮಾತನಾಡಲಿದ್ದಾರೆ. ಬೆಳಗ್ಗೆ 6:40ರಿಂದ 7ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಎದುರುಗಡೆಯಲ್ಲಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಲಿರುವ ಕಾರ್ಯಕ್ರಮದ ನೇರಪ್ರಸಾರವಾಗಲಿದೆ. 7ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

*5 ಸಾವಿರ ಜನರು ಸೇರುವ ನಿರೀಕ್ಷೆ: ಶಾಲಾ-ಕಾಲೇಜು ವಿದ್ಯಾರ್ಥಿಗಳು,ಪತಂಜಲಿ,ಆರ್ಟ್ ಆಫ್ ಲಿವಿಂಗ್, ಬ್ರಹ್ಮಕುಮಾರಿ ಸಂಸ್ಥೆ, ಹಾಸ್ಟೆಲ್ ವಿದ್ಯಾರ್ಥಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ ಪ್ರತಿ ತಾಲೂಕಿನಿಂದ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ಖಾಸಗಿ ಬಸ್‍ಗಳು ಹೊರತುಪಡಿಸಿ 60ಕ್ಕೂ ಹೆಚ್ಚು ಬಸ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಿಸಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು.

ಯೋಗ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳಿಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆ ಕೈಗೊಳ್ಳಿ ಮತ್ತು ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಾಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನಕ್ಕೆ ಗ್ರೀನ್ ಮ್ಯಾಟ್ ವ್ಯವಸ್ಥೆ,ವೇದಿಕೆ,ಧ್ವನಿವರ್ಧಕ ವ್ಯವಸ್ಥೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಹಾಗೂ ಸಂಪೂರ್ಣ ಸ್ವಚ್ಛತೆಯನ್ನು ಕೈಗೊಳ್ಳಬೇಕು ಎಂದು ಡಿಸಿ ಅನಿರುದ್ಧ ಶ್ರವಣ್ ಅವರು ಸೂಚನೆ ನೀಡಿದರು.

ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಟೀ ಶರ್ಟ್ ಮತ್ತು ಕ್ಯಾಪ್‍ಗಳ ವ್ಯವಸ್ಥೆ ಮಾಡಿ ಎಂದು ತಿಳಿಸಿದ ಡಿಸಿ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು. ಯೋಗ ದಿನಾಚರಣೆ ಅಂಗವಾಗಿ ಯೋಗದ ಮಹತ್ವ ಸಾರುವ ಉದ್ದೇಶದಿಂದ ಜೂ.19ರಂದು ನಗರದಲ್ಲಿ ಬೃಹತ್ ಯೋಗ ಜಾಥಾ ನಡೆಸಲಾಗುವುದು ಎಂದರು.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button